ಕಾವೇರಿ ಕಿಚ್ಚು: ಸಮಸ್ಯೆ ಬಗೆಹರಿಸಲು ಎಲ್ಲಾ ಪಕ್ಷಗಳ ಮುಖಂಡರಿಗೆ ನಟ ಕಿಚ್ಚ ಸುದೀಪ್ ಬಹಿರಂಗ ಪತ್ರ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು(ಸೆಪ್ಟೆಂಬರ್ 26) ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಸೂಚನೆ ಸಿಗುತ್ತಿದೆ.
ಶುಕ್ರವಾರ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಅಂದಿನ ಪ್ರತಿಭಟನೆಯಲ್ಲಿ ಕನ್ನಡ ಚಿತ್ರರಂಗದ ಕಲಾವಿದರು ಕೂಡ ಭಾಗಿ ಆಗುವ ಸಾಧ್ಯತೆಯಿದೆ. ಈಗಾಗಲೇ ದರ್ಶನ್, ಸುದೀಪ್, ಶಿವಣ್ಣ ಸೇರಿದಂತೆ ಕನ್ನಡ ಚಿತ್ರರಂಗದ ಸ್ಟಾರ್ ನಟರು ಕಾವೇರಿ ಹೋರಾಟಕ್ಕೆ ಬಂಬಲ ಸೂಚಿಸಿದ್ದಾರೆ. ಅವಶ್ಯ ಬಿದ್ದರೆ ಯಾವುದೇ ಹೋರಾಟಕ್ಕೂ ಸಿದ್ಧ ಎಂದಿದ್ದಾರೆ.

ಹೋರಾಟ ತೀವ್ರವಾಗುತ್ತಿರುವ ಸಮಯದಲ್ಲಿ ನಟ ಸುದೀಪ್ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲಾ ಪಕ್ಷದ ನಾಯಕರಿಗೆ ಪತ್ರ ಬರೆದಿದ್ದಾರೆ. ಮಾತುಕತೆ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವಂತೆ ಮನವಿ ಮಾಡಿದ್ದಾರೆ. ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕ ದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ. ತಮಿಳುನಾಡು ಸಿಎಂ ಜೊತೆ ಸೌಹಾರ್ದ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಬೇಕು, ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿ ತಿಳಿಸಲು ಎಲ್ಲಾ ಪಕ್ಷದ ನಾಯಕರು ಮುಂದೆ ಬರಬೇಕು" ಎಂದಿದ್ದಾರೆ.
ಸಮಸ್ತ ಕನ್ನಡ ಜನತೆಗೆ ನಮಸ್ಕಾರ..
"ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ.
ಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕ ದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ.
ಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ.
ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ".
ನಮ್ಮ ಜಲ ನಮ್ಮ ಹಕ್ಕು
ಪ್ರೀತಿಯಿಂದ -ನಿಮ್ಮ ಕಿಚ್ಚ


Click it and Unblock the Notifications











