"ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ"; ಗಜಪಡೆ ಪೋಸ್ಟ್ ಬಗ್ಗೆ ಸಿಎಂ ಎಚ್ಚರಿಕೆ
ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಗಜಪಡೆ ಟ್ವಿಟರ್ ಪೇಜ್‌ನಲ್ಲಿ ಮಾಡಿರುವ ಅವಹೇಳನಕಾರಿ ಪೋಸ್ಟ್‌ಗೆ ಭಾರೀ ಅಸಮಾಧಾನ ವ್ಯಕ್ತವಾಗುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. X(ಟ್ವಿಟ್ಟರ್) ವೇದಿಕೆಯಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೋಗಿದ್ದರಿಂದಲೇ ತಂಡ ಪದೇ ಪದೆ ಸೋಲುತ್ತಿದೆ. "ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಆಹ್ವಾನಿಸಿದ್ದರಿಂದಲೇ ಹೀಗೆ ಆಗುತ್ತಿದೆ" ಎನ್ನುವ ಅರ್ಥದಲ್ಲಿ ಬಹಳ ಕೀಳಾಗಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ಪುನೀತ್ ಅಭಿಮಾನಿಗಳು ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದಾರೆ.

ಬಿಗ್‌ಬಾಸ್ ಖ್ಯಾತಿಯ ಪ್ರಥಮ್, ಆಂಕರ್ ಅನುಶ್ರೀ, ನಿರ್ದೇಶಕ ಪ್ರಕಾಶ್ ರಾಜ್ ಮೇಹು ಸೇರಿದಂತೆ ಹಲವರು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ಕೆಟ್ಟದಾಗಿ ಪೋಸ್ಟ್ ಮಾಡಿದ ಕಿಡಿಗೇಡಿಗೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೆಲವರು ದರ್ಶನ್ ಅಭಿಮಾನಿಯೇ ಈ ಪೋಸ್ಟ್ ಮಾಡಿರುವುದು ಎಂದು ಆರೋಪಿಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ "ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
"ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ"
"ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ. ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ"
"ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.


Click it and Unblock the Notifications











