Darshan: "ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ": - ದರ್ಶನ್!
ಕಾವೇರಿ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಮಸ್ಯೆ ಮತ್ತೆ ಭುಗಿಲೆದ್ದಿದೆ. ಈ ಬಾರಿ ಕರ್ನಾಟಕದಲ್ಲಿ ಮಳೆಯಾಗಿಲ್ಲ. ಬರದ ವಾತಾವರಣ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸಬೇಕು ಅನ್ನೋ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಬೇರೆ ಬೇರೆ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲವನ್ನು ಸೂಚಿಸುತ್ತಿವೆ. ಈ ಹಿನ್ನೆಲೆಯಲ್ಲಿಯೇ ಕಾವೇರಿ ವಿವಾದ ಭುಗಿಲೆದ್ದಿರುವ ಈ ಸಂದರ್ಭದಲ್ಲಿ ಕನ್ನಡದ ನಟರು ಮೌನಕ್ಕೆ ಶರಣಾಗಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿತ್ತು.

ಕೆಲವು ಸಂಘಟನೆಗಳು ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ಕೂಡ ಮಾಡಿದ್ದಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿ ರೈತರಿಗೆ ಬೆಂಬಲ ಸೂಚಿಸಿದ್ದಾರೆ.
"ಕಾವೇರಿ ನೀರಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ"
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾವೇರಿ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ರೈತರ ಹೋರಾಟಕ್ಕೆ ದರ್ಶನ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಆ ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
"ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ." ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ರೈತರಿಗೆ ಜಗ್ಗೇಶ್ ಬೆಂಬಲ
ಕನ್ನಡ ಚಿತ್ರರಂಗ ಕಾವೇರಿ ಹೋರಾಟಕ್ಕೆ ಸಂಬಂಧಿಸಿದಂತೆ ಮೌನವಾಗಿದೆ ಎಂಬ ಆಕ್ರೋಶ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ನವರಸನಾಯಕ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದರು. ರಾಜ್ಯ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಹಾಜರಾಗಿ ನಮ್ಮ ಬೆಂಬಲ ಸದಾ ಕನ್ನಡಿಗರ ಪರವಾಗಿ ಇದೆ ಎಂದು ಹೇಳಿ ಬಂದಿದ್ದಾಗಿ ಜಗ್ಗೇಶ್ ಹೇಳಿದ್ದರು.
"ನಾನು ಕನ್ನಡ ಚಿತ್ರರಂಗದಲ್ಲಿ 42 ವರ್ಷಕಾಲ ಸೇವೆ ಸಲ್ಲಿಸಿ ಕನ್ನಡಿಗರ ಪ್ರೀತಿ ಅಭಿಮಾನಕ್ಕೆ ಪಾತ್ರನಾಗಿದ್ದೇನೆ. ತಿಂಗಳ ಹಿಂದೆ ಕರ್ನಾಟಕ ರಾಜ್ಯ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಹಾಜರಾಗಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿಕೆಶಿರವರ ಮುಂದೆ ಕಾವೇರಿ ನದಿಯ ನೀರಿನ ವಿಚಾರವಾಗಿ ನಮ್ಮ ಬೆಂಬಲ ಸದಾ ಕನ್ನಡಿಗರ ಪರವಾಗಿಯೇ ಇದೆ ಎಂದು ತಿಳಿಸಿ ಬಂದಿದ್ದೆ. ನಾಳೆ ದೆಹಲಿಯಲ್ಲಿ ಕರ್ನಾಟಕ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ. ಅದರಲ್ಲೂ ಭಾಗಿಯಾಗಿ 'ಕಾವೇರಿ ನದಿಯ' ಪರವಾಗಿ ಹಾಗೂ ಕನ್ನಡದ ರೈತರ ಪರವಾಗಿ ನನ್ನ ಧ್ವನಿಯನ್ನು ಪ್ರಸ್ತಾಪಿಸುತ್ತೇನೆ ಇಂತಿ ಕನ್ನಡಿಗ ಜಗ್ಗೇಶ್" ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದರು.
ರಾಘಣ್ಣ ಪ್ರತಿಕ್ರಿಯೆ
ರಾಘವೇಂದ್ರ ರಾಜ್‌ಕುಮಾರ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೋಡಿದ್ದಾರೆ. ಅಣ್ಣಾವ್ರು ಹಾಗೂ ಅವರ ಕುಟುಂಬ ನೆಲ, ಜಲ, ಭಾಷೆಗೆ ಸಂಬಂಧಿಸಿದಾಗ, ಹೋರಾಟಕ್ಕೆ ಧುಮುಕುತ್ತಿತ್ತು. ಈಗ ಆ ಮನಸ್ಥಿತಿ ಯಾರಲ್ಲೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದರು.
"ಮುಂದಿನ ದಿನಗಳಲ್ಲಿ ರೈತರಜೊತೆಗೆ ಹೋರಾಟದಲ್ಲಿ ಭಾಗಿಯಾಗುತ್ತೇವೆ. ನೆಲ, ಜಲ, ಭಾಷೆ ಅಂತ ಬಂದಾಗ ಯಾವಾಗಲೂ ಹೋರಾಟ ಮಾಡಿದ್ದೇವೆ. ಪ್ರತಿಭಟನೆಗೆ ನಮ್ಮ ಕರೆದಿಲ್ಲ. ಹೀಗಾಗಿ ರೈತರು ಕರೆದ ಕೂಡಲೇ ಪ್ರತಿಭಟನೆಗೆ ಧುಮುಕುತ್ತೇವೆ." ಎಂದು ರಾಘಣ್ಣ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.


Click it and Unblock the Notifications











