ಒಟ್ಟಿಗೆ ಕುಳಿತು ಆರ್‌ಸಿಬಿ VS ಸಿಎಸ್‌ಕೆ ಪಂದ್ಯ ವೀಕ್ಷಿಸಿದ ಶಿವಣ್ಣ ಹಾಗೂ ಧನುಷ್

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್‌ಗಳ ಗೆಲುವನ್ನು ಕಂಡಿದೆ.
ತವರು ನೆಲದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲುವ ಭರವಸೆ ಮೂಡಿಸಿ ಅಂತಿಮ ಹಂತದಲ್ಲಿ ಸೋಲನ್ನು ಕಂಡಿದ್ದು, ಅಭಿಮಾನಿಗಳು ನಿರಾಸೆಗೊಳಗಾಗಿದ್ದಾರೆ. ಪಂದ್ಯ ವೀಕ್ಷಿಸಲು ಸಿನಿಮಾ ಸೆಲೆಬ್ರಿಟಿಗಳೂ ಸಹ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಬಲಿಸಲು ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಆಗಮಿಸಿದ್ದರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹುರಿದುಂಬಿಸಲು ತಮಿಳು ನಟ ಧನುಷ್ ಆಗಮಿಸಿದ್ದರು. ತಮಿಳಿನ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ಒಟ್ಟಿಗೆ ನಟಿಸುತ್ತಿರುವ ಈ ಜೋಡಿ ಒಟ್ಟಿಗೆ ಕುಳಿತು ಪಂದ್ಯವನ್ನು ವೀಕ್ಷಿಸಿದೆ. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 227 ರನ್‌ಗಳ ಗುರಿಯನ್ನು ನೀಡಿತ್ತು. ಈ ಕಠಿಣ ಗುರಿಯನ್ನು ಬೆನ್ನತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಕಲೆಹಾಕಿದ್ದು 8 ರನ್‌ಗಳ ಸೋಲನ್ನು ಕಂಡಿದೆ.


Click it and Unblock the Notifications











