ಗಂಧರ್ವ ಲೋಕದೆಡೆಗೆ ಪಯಣ ಬೆಳೆಸಿದ ಗಾನ ಯೋಗಿ ಎಸ್ ಪಿ ಬಿ
ಲೆಜೆಂಡರಿ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ತಮಿಳುನಾಡಿನ ರೆಡ್ ಹಿಲ್ಸ್ ಬಳಿ ಇರುವ ತಾಮರೈಪಾಕ್ಕಂನ ಎಸ್ ಪಿ ಬಿ ಅವರ ಪ್ರೀತಿಯ ತೋಟದ ಮನೆಯಲ್ಲಿ ಇಂದು 12.30ಕ್ಕೆ ಅಂತ್ಯಸಂಸ್ಕಾರ ಮಾಡಲಾಯಿತು.
ಹೈದರಾಬಾದ್ ನಿಂದ ಆಗಮಿಸಿದ್ದ ಪುರೋಹಿತರ ತಂಡ ಅಂತಿಮ ಪೂಜೆ ಸಲ್ಲಿಸಿದರು. ಪುತ್ರ ಎಸ್ ಪಿ ಚರಣ್ ಅಂತಿಮ ವಿಧಿವಿಧಾನದ ಕ್ರಿಯೆ ನೆರವೇರಿಸಿದರು. ಅಪಾರ ಸಂಖ್ಯೆಯ ಅಭಿಮಾನಿಗಳು, ಗಣ್ಯರು ಗಾನ ಗಾರುಡಿಗನ ಅಂತಿಮ ದರ್ಶನ ಪಡೆದರು. ನಟರಾದ ವಿಜಯ್, ಅರ್ಜುನ್ ಸರ್ಜಾ ಸೇರಿದಂತೆ ಅನೇಕ ಗಣ್ಯರು ಅಂತಿಮ ಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಕಳೆದ ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿನ್ನೆ (ಸೆಪ್ಟಂಬರ್ 25)ರಂದು ಮಧ್ಯಾಹ್ನ 1.04ಕ್ಕೆ ಕೊನೆಯುಸಿರೆಳೆದಿದ್ದಾರೆ. ಎಸ್ ಪಿ ಬಿ ಇನ್ನಿಲ್ಲ ಎನ್ನುವ ಸತ್ಯವನ್ನು ಕೋಟ್ಯಂತರ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

Recommended Video
ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆ ಸೇರಿದಂತೆ ಸುಮಾರು 16 ಭಾಷೆಯಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಎಸ್‌ಪಿಬಿ ಹಾಡಿದ್ದಾರೆ. ಅತಿ ಹೆಚ್ಚು ಹಾಡಿಗೆ ಧ್ವನಿಯಾಗಿದ್ದ ಎಸ್‌ಪಿಬಿ ಅವರು ಗಿನ್ನಿಸ್ ದಾಖಲೆಗೆ ಸಹ ಪಾತ್ರರಾಗಿದ್ದಾರೆ. ತಮ್ಮ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 25 ಬಾರಿ ಆಂಧ್ರ ಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ರಾಜ್ಯ ಪ್ರಶಸ್ತಿಗಳು ಸಹ ಪಡೆದಿದ್ದಾರೆ. ಚಿತ್ರರಂಗದಲ್ಲಿ ಎಸ್‌ಪಿಬಿ ಅವರ ಕೊಡುಗೆಗೆ ಗೌರವಿಸಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಸಹ ಲಭಿಸಿದೆ.


Click it and Unblock the Notifications











